ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 12 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಪ್ರಕರಣ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್
ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಜರಾಗಿ, ಪ್ರಕರಣದ ಎಲ್ಲ 12 ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರು. ಪರಿಹಾರ ಕಲ್ಪಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ಪೂರ್ಣ ಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಕಾಲಮಿತಿ ನಿಗದಿಪಡಿಸಬೇಕು. ಇದು ಅತಿ ಅಪರೂಪದ ಪ್ರಕರಣವಾಗಿದ್ದು, ಈ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆಯ ಸಂದೇಶ ರವಾನಿಸಬೇಕಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅರ್ಜಿ ಕುರಿತು ಮುಂದಿನ ದಿನಗಳಲ್ಲಿ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿ ಪ್ರಕರಣವನ್ನು ವಿಲೇವಾರಿ ಮಾಡಿದೆ.