ಬೆಂಗಳೂರು : ಮುಂದಿನ ಐದು ದಿನ ಕರ್ನಾಟಕದಾದ್ಯಂತ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶದ ಮಧ್ಯ ಕರಾವಳಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಈ ಹವಾಮಾನ ಬದಲಾವಣೆ ಸಂಭವಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಬೆಂಗಳೂರಿನ ಐದು ದಿನಗಳ ಹವಾಮಾನ ಮುನ್ಸೂಚನೆಯನ್ನು ಐಎಂಡಿ ಹಂಚಿಕೊಂಡಿದ್ದು, ಮೋಡ ಕವಿದ ವಾತಾವರಣದೊಂದಿಗೆ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಏಪ್ರಿಲ್ 15, 16 ಮತ್ತು 17 ರಂದು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಅಲ್ಲದೆ, ಈ ದಿನಗಳಲ್ಲಿ ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದೆ. ನಂತರ, ಏಪ್ರಿಲ್ 18 ಮತ್ತು 19 ರಂದು ಕ್ರಮವಾಗಿ ಮಳೆ ಮತ್ತು ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ.
ಕರ್ನಾಟಕದ 15 ಜಿಲ್ಲೆಗಳಿಗೆ ಮಂಗಳವಾರ ಐಎಂಡಿ ಹಳದಿ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಹೆಚ್ಚು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ವಾರವಿಡೀ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಕಲಬುರಗಿ, ಯಾದಗಿರಿ ಮತ್ತು ಬೀದರ ನಂತಹ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ ಎಂದು ತಿಳಿಸಿದೆ.

ಏತನ್ಮಧ್ಯೆ, ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆಯಿಂದಾಗಿ ನಿವಾಸಿಗಳು ವಾರದ ಅಂತ್ಯದವರೆಗೆ ಮಳೆಯನ್ನು ನಿರೀಕ್ಷಿಸಬಹುದು ಎಂದು ಐಎಂಡಿ ಹೇಳಿದೆ.