ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ. 75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಕಚೇರಿಯ ಎಕ್ಸ್ ಪ್ರಕಟಣೆ ಬುಧವಾರ ತಿಳಿಸಿದೆ.

ಈ ಮೊದಲು ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ವಿಭಾಗದ ಹುದ್ದೆಗಳಿಗೆ ಶೇ. 100 ರಷ್ಟು ಮೀಸಲಾತಿ ಎಂದು ಹೇಳಲಾಗಿತ್ತು. ಆದರೆ, ಉದ್ಯಮ ವಲಯದಿಂದ ಕೆಲವರ ವಿರೋಧ ಬಂದಿದ್ದರಿಂದ ಶೇ. 100ರ ಬದಲು ಶೇ 75 ಮೀಸಲಾತಿ ಕಲ್ಪಿಸಲಾಗಿದೆ.

ವಿಧೇಯಕಕ್ಕೆ ಇದೇ ಅಧಿವೇಶನದಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ಯಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿರುವುದಾಗಿ ಎಕ್ಸ್ ಪ್ರಕಟಣೆ ತಿಳಿಸಿದೆ.