ಬೆಂಗಳೂರು: ಕೆಂಗಲ್ ಹನುಮಂತಯ್ಯ, ಹೆಚ್.ಡಿ. ಕುಮಾರಸ್ವಾಮಿ ಅವರು ಗೆಲುವು ಸಾಧಿಸಿ ಮುಖ್ಯಮಂತ್ರಿ ಪಟ್ಟಕ್ಕೇರಿದ ಚನ್ನಪಟ್ಟಣದ ಮೇಲೆ ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಣ್ಣಿಟ್ಟಿದ್ದಾರೆ.
ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾದ ಹಿನ್ನೆಲೆಯಲ್ಲಿ ತಾವು ಈ ಹಿಂದೆ ಸ್ಪರ್ಧಿಸಿ ಗೆದ್ದಿದ್ದ ಚನ್ನಪಟ್ಟಣ ವಿಧಾನಸಭಾ ಮತಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯಬೇಕಿದೆ. ಮುಖ್ಯಮಂತ್ರಿ ಆಗುವ ಬಲವಾದ ಹೊಂಗನಸು ಕಂಡಿರುವ ಡಿ.ಕೆ. ಶಿವಕುಮಾರ್ ಅವರು ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅದೃಷ್ಟವನ್ನು ತಮ್ಮ ಮುಡಿಗೆ ಏರಿಸಿಕೊಳ್ಳುವ ತವಕದಲ್ಲಿದ್ದಾರೆ. ಇಂದು ಚನ್ನಪಟ್ಟಣ ಮತಕ್ಷೇತ್ರದ 16 ದೇವಾಲಯಗಳಿಗೆ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಲು ಮುಂದಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಮತಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದ ಅವರ ಸಹೋದರ ಡಿ.ಕೆ. ಸುರೇಶ್ ಚನ್ನಪಟ್ಟಣದಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತು ಇತ್ತು. ಆದರೆ, ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ಡಿ.ಕೆ. ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಮತಕ್ಷೇತ್ರಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಗೋಚರಿಸಿದೆ. ಒಂದು ವೇಳೆ ಡಿ.ಕೆ. ಶಿವಕುಮಾರ್ ಸ್ಪರ್ಧಿಸಿದರೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ.