ಬೆಳಗಾವಿ :
ಜಿಲ್ಲೆಯಲ್ಲಿ ಅತಿ ಹೆಚ್ಚು ವಿಸ್ತೀರ್ಣದ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ಬೇಡಿಕೆ ಇದೆ. ಕ್ರೀಡಾ ಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಹೆಸರು ಪ್ರತಿನಿಧಿಸುತ್ತಾರೆ. ಆದ್ದರಿಂದ ಕ್ರೀಡಾ ಪಟುಗಳಿಗೆ ಅನುಕೂಲವಾಗುವಂತೆ ನೂತನ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ ರೂಪಿಸಬೇಕು ಎಂದು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿಯ ರಾಮತೀರ್ಥ ನಗರದಲ್ಲಿ (ಕೆ.ಇ.ಬಿ.) ಗ್ರಿಡ್ ಹತ್ತಿರ ಗುರುವಾರ (ಡಿ.07) ನೂತನ “ಜಿಲ್ಲಾ ಕ್ರೀಡಾಂಗಣ” ನಿರ್ಮಿಸಲು ಪ್ರಸ್ತಾಪಿಸಿರುವ ಜಾಗೆಯನ್ನು ಪರಿವೀಕ್ಷಿಸಿ, ಅವರು ಮಾತನಾಡಿದರು.
ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಯಿಂದ ಕ್ರೀಡಾಂಗಣ ನಿರ್ಮಾಣಕ್ಕೆ ಈಗ ಗುರುತಿಸಿರುವ ಸ್ಥಳ ಸೂಕ್ತವಾಗಿದೆ. ನಿರ್ಮಾಣಕ್ಕೆ ಅಗತ್ಯವಿರುವ ಯೋಜನೆ ರೂಪಿಸಿ, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿದ ಬಳಿಕ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರೀಡಾ ಪಟುಗಳಿದ್ದಾರೆ. ಈ ಕ್ರೀಡಾಂಗಣ ನಿರ್ಮಾಣದಿಂದ ಯುವ ಕ್ರೀಡಾ ಪಟುಗಳಿಗೆ ಬಹಳಷ್ಟು ಅನುಕೂಲವಾಗಲಿದೆ.
ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಈಗಾಗಲೇ ಕ್ರೀಡಾಂಗಣ ನಿರ್ಮಾಣಕ್ಕೆ 9 ಎಕರೆ 20 ಗುಂಟೆ ಸ್ಥಳ ನೀಡಿದ್ದಾರೆ. ಸದರಿ ಸರ್ವೇ ನಂಬರ್ ಒಳಪಡುವ ಇನ್ನೂ 6 ಎಕರೆ ಜಾಗೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಸ್ಥಳ ಗುರುತಿಸಬೇಕು ಎಂದು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಳಗಾವಿ ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.