ಬೆಂಗಳೂರು :
ತೀವ್ರ ಉಸಿರಾಟ ತೊಂದರೆ ಅನುಭವಿಸುತ್ತಿದ್ದ ಹಿರಿಯ
ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

 

ಲೀಲಾವತಿ (1938) ದಕ್ಷಿಣ ಭಾರತದ ಪ್ರಸಿದ್ದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 6೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2೦೦೦ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2೦೦8ರಲ್ಲಿ ಪಡೆದರು.

ಲೀಲಾವತಿ ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು.

ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿಕೊಳ್ಳುತ್ತಿದ್ದರು.

ದಕ್ಷಿಣ ಕನ್ನಡ ದ ಬೆಳ್ತಂಗಡಿ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು, ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ. 50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.