ಉಡುಪಿ: ಕಾರ್ಕಳ ತಾಲೂಕು ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಲೋಪಕ್ಕೆ ಸಂಬಂಧಿಸಿದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ಅವರು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವ ಸಾಧ್ಯತೆ ಇರುವ ಕಾರಣ ಅವರನ್ನು ಅಮಾನತು ಮಾಡಲಾಗಿದೆ. ಸಹಾಯಕ ಯೋಜನಾ ನಿರ್ದೇಶಕ ಪಿ. ದಿವಾಕರ್ ಅವರನ್ನು ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಕಾರ್ಕಳ ತಾಲೂಕು ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಪೂರ್ಣಗೊಳಿಸದೆ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೆ ಉದ್ಘಾಟಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿತ್ತು. ಕಾಮಗಾರಿಯ ಗುಣಮಟ್ಟದ ಬಗ್ಗೆ ಆರೋಪ ಕೇಳಿಬಂದಿತ್ತು. ಇದರ ಬಗ್ಗೆ ಸಿಒಡಿ ಮತ್ತು ನ್ಯಾ.ಎಚ್ .ಎನ್. ನಾಗಮೋಹನದಾಸ ವಿಚಾರಣಾ ಆಯೋಗ ತನಿಖೆ ನಡೆಸುತ್ತಿದೆ.