ಹಾಸನ: ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ಎಂದು ವರದಿಯಾಗಿವೆ.

ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿಕೊಂಡಿವೆ. ಮುಂಜಾಗೃತಾ ಕ್ರಮವಾಗಿ ಘಾಟಿಯಲ್ಲಿ ವಾಹನ ಸಂಚಾರ ರದ್ದುಗೊಳಿಸಲಾಗಿದೆ. . ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರ್ಯಾಚರಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನ ನಡೆಯುತ್ತಿದೆ.
ಶಿರಾಡಿ ಘಾಟ್‌ನಲ್ಲಿ ಭೂ ಕುಸಿತದಿಂದ ಮಂಗಳೂರು-ಬೆಂಗಳೂರು ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ವಾರವೂ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಸಮೀಪ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿತ್ತು. ನಂತರ ತಾತ್ಕಾಲಿಕವಾಗಿ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್ ರಸ್ತೆಯನ್ನು ಬಂದ್ ಮಾಡಲಾಗಿತ್ತು.