ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಎರಡು ದಿನಗಳಿಂದ ಮುಂದುವರೆದಿದ್ದು, ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ ಜಿಲ್ಲೆಗೆ ಭಾನುವಾರ ಸಂಜೆ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ದಕ್ಷಿಣ ಕನ್ನಡ, ಬಾಗಲಕೋಟೆ, ರಾಯಚೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸೋಮವಾರವೂ ಆರೆಂಜ್ ಅಲರ್ಟ್ ನೀಡಲಾಗಿದೆ.
ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 55 ಕಿ.ಮೀ ವರೆಗೆ ಕರಾವಳಿಯ ಉದ್ದಕ್ಕೂ ಬೀಸಬಹುದು, ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಅಲ್ಲಿನ ಬಹುತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಗಾಳಿಯು ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಇರಲಿದ್ದು, ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಮತ್ತು ರಾಯಚೂರು, ಬಾಗಲಕೋಟೆ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.
ಶನಿವಾರ ಅತಿ ಹೆಚ್ಚು ಮಳೆ 13 ಸೆಂ.ಮೀ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ನಲ್ಲಿ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 11, ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 7 ಸೆಂ.ಮೀ ಮಳೆ ಬಿದ್ದಿದೆ.