ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆಪ್ಟೆಂಬರ್ 28ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆ ಮುಂದೂಡಲಾಗಿದೆ.
402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ. 28ರ ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ತಿಳಿಸಿದ್ದರು. ಆದರೆ ಈಗ ಮತ್ತೆ ಮುಂದೂಡಲಾಗಿದೆ ಎಂದು ಸ್ವತಃ ಗೃಹ ಸಚಿವರೇ ಮಾಹಿತಿ ನೀಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಸೆ.28ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು. ನಂತರ, ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.