ಉಡುಪಿ/ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರು ಲೋಕಸಭಾ ಚುನಾವಣೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಇದೀಗ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವೇದಿಕೆ ಸಜ್ಜಾಗಿದೆ.

ಬಿಜೆಪಿಯಿಂದ ಸ್ಪರ್ಧಿಸಲು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಆಕಾಂಕ್ಷಿಗಳು ತೆರೆಮರೆಯಲ್ಲಿ ಪ್ರಯತ್ನ ನಡೆಸಿದ್ದಾರೆ.

ಮಾಜಿ ಸಚಿವ ಪ್ರಮೋದ ಮಧ್ವರಾಜ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಉಸ್ತುವಾರಿ ವಿಕಾಸ್ ಪುತ್ತೂರು, ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ.

ಕಳೆದ ಕೆಲವು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವಕ್ಕೆ ಒಳಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಚಿವ ಪ್ರಮೋದ ಮಧ್ವರಾಜ್ ಹೆಸರು ಉಭಯ ಜಿಲ್ಲೆಗಳಲ್ಲಿ ಪ್ರಧಾನವಾಗಿ ಕೇಳಿ ಬರುತ್ತಿದೆ. ಕಳೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆ ವೇಳೆ ಸಹ ಇವರ ಹೆಸರು ಹರಿದಾಡಿತ್ತು. ಮೊಗವೀರ ಸಮುದಾಯದ ಪ್ರಬಲ ನಾಯಕರು ಆಗಿರುವ ಇವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಾಯಕರ ಬೆಂಬಲ ಪಡೆಯಲು ಮುಂದಾಗಿದ್ದಾರೆ.

ಮೂರು ಬಾರಿ ಸಂಸದರಾಗಿ ಗಮನ ಸೆಳೆದಿರುವ ನಳಿನ್ ಕುಮಾರ್ ಕಟೀಲು ಬಿಜೆಪಿ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ಇವರಿಗೆ ಉಭಯ ಜಿಲ್ಲೆಗಳ ಬಿಜೆಪಿ ಶಾಸಕರ ಬೆಂಬಲ ಇದೆ. ಬಂಟ ಸಮುದಾಯದ ನಾಯಕನಿಗೆ ಲೋಕಸಭಾ ಟಿಕೆಟ್ ಮಂಗಳೂರಿನಲ್ಲಿ ನೀಡಿರುವುದರಿಂದ ಅದೇ ಸಮುದಾಯದ ಇನ್ನೊಬ್ಬರಿಗೆ ಪರಿಷತ್ ಸಿಗುತ್ತದೋ ಕಾದು ನೋಡಬೇಕಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಬಿಲ್ಲವ ಸಮುದಾಯದ ಪ್ರಬಲ ನಾಯಕರು ಆಗಿರುವ ಸತೀಶ ಕುಂಪಲ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಬಂಟ ಸಮುದಾಯ ಹಾಗೂ ಈ ಮೊದಲು ಯುವ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪ್ರಯತ್ನ ನಡೆಸಿದ್ದಾರೆ. ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದಲ್ಲಿ ಇವರ ಹೆಸರು ಹರಿದಾಡಿತ್ತು.

ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಉಸ್ತುವಾರಿ ಹಾಗೂ ಯುವ ನಾಯಕರು ಆಗಿರುವ ವಿಕಾಸ್ ಪುತ್ತೂರು ಹೆಸರು ಸಹ ಕೇಳಿ ಬರುತ್ತಿದೆ. ಪರಿಷತ್ ಚುನಾವಣೆಗೆ ಈ ಹಿಂದೆಯೂ ಸಹ ಇವರ ಹೆಸರು ಮುಂಚೂಣಿಗೆ ಬಂದಿತ್ತು.