ಹುಬ್ಬಳ್ಳಿ : ಬೆಳಗಾವಿ-ಕಿತ್ತೂರು- ಧಾರವಾಡ ನೇರ ರೈಲ್ವೆ ಯೋಜನೆ ಕಾರ್ಯಗತ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಲಯ ಕಚೇರಿಯಲ್ಲಿ ಮಾತನಾಡಿದ ಅವರು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ ಮಾರ್ಗ ಯೋಜನೆಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವುದಾಗಿ ಬೆಳಗಾವಿ ಮತ್ತು ಧಾರವಾಡ ಜಿಲ್ಲಾಡಳಿತಗಳು ಭರವಸೆ ನೀಡಿವೆ. ಇದು ಸಾಧ್ಯವಾದರೆ ಯೋಜನೆಯನ್ನು 2027 ರಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವೆ ಎಂದು ಅವರು ಹೇಳಿದರು. ವಂದೇ ಭಾರತ ರೈಲಿನ ಸಂಚಾರ, ನಿಲುಗಡೆ ಮತ್ತು ಇತರ ನಿರ್ಧಾರಗಳು ನನ್ನ ಕೈಯಲ್ಲಿ ಇಲ್ಲ ಎಂದು ಅವರು ಹೇಳಿದರು.
ನಾಲ್ಕು ರಾಜ್ಯಗಳನ್ನು ಒಳಗೊಂಡಿರುವ ಕೊಂಕಣ ರೈಲ್ವೆ ನಿಗಮವನ್ನು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲಾಗುವುದು. ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಕೇರಳ ಒಳಗೊಂಡಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಹಲವು ವರ್ಷಗಳಿಂದ ಚರ್ಚೆ ನಡೆಸಲಾಗಿದ್ದು ಈಗ ಸೇರ್ಪಡೆಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.