ನವದೆಹಲಿ: ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭವಾಗಿದ್ದು, ಹರಿಯಾನದಲ್ಲಿ ಕಾಂಗ್ರೆಸ್ 62, ಬಿಜೆಪಿ 24, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ 18, ಕಾಂಗ್ರೆಸ್ 12 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿವೆ.
ಈ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿಕ್ಕೂಚಿಯಾಗುವ ಸಾಧ್ಯತೆ ಇದೆ.
ಹರಿಯಾಣದಲ್ಲಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರುವ ಆಸೆಯಲ್ಲಿ ಕಾಂಗ್ರೆಸ್ ಪಾಳಯ ಇದೆ. ಕಮಲ ಪಾಳಯವು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಸರ್ಕಾರ ರಚನೆಯ ಭರವಸೆಯಲ್ಲಿವೆ. ರಾಜ್ಯದಲ್ಲಿ ದಶಕದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ತನ್ನ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಆದರೆ, ಕಾಂಗ್ರೆಸ್-ನ್ಯಾಷನಲ್ ಕಾನ್ನರೆನ್ಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.
ತಾಜಾ ಮಾಹಿತಿಯ ಪ್ರಕಾರ ಹರಿಯಾಣದಲ್ಲಿ ಬಿಜೆಪಿ ಇದೀಗ ಆರಂಭಿಕ ಹಿನ್ನಡೆ ನಡುವೆ ಮತ್ತೆ ಪುಟಿದೆದ್ದಿದೆ. ಬಿಜೆಪಿ 44 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಈವರೆಗೆ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಇದೇ ರೀತಿ ಮುನ್ನಡೆ ಸಾಧಿಸಿದರೆ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ.