ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ (ಅಕ್ಟೋಬರ್ 9) ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಚಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 10ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷೀನ ಒಳನಾಡು ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಕ್ಟೋಬರ್ 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.