ಬೆಳಗಾವಿ :
ಖಾನಾಪುರ ಹಾಗೂ ಬೆಳಗಾವಿ ಗ್ರಾಮಿಣ ತಾಲೂಕುಗಳಲ್ಲಿ ಕುಷ್ಠರೋಗ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿದ್ದು, ಅಂತಹ ಪ್ರದೇಶಗಳಲ್ಲಿ ಕೂಡಲೇ ಸಮೀಕ್ಷೆ ಕೈಗೊಂಡು ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಡಿ.21) ನಡೆದ 2023-24 ನೇ ಸಾಲಿನ (LCDC)ರ ಕಾರ್ಯಕ್ರಮದಡಿ ಡಿಸೆಂಬರ್ 27 ರಿಂದ ಜನವರಿ 11, 2024 ರ ವರೆಗೆ ನಡೆಯಲಿರುವ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವ ಅಭಿಯಾನವನ್ನು ಹಮ್ಮಿಕೊಳ್ಳುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಷ್ಠರೋಗ ಪ್ರಕರಣಗಳ ಕುರಿತು ಸಮೀಕ್ಷೆ ನಡೆಸಿ, ಹೆಚ್ಚುತ್ತಿರುವ ಪ್ರಕರಣಗಳನ್ನು ಪತ್ತೆ ಮಾಡಬೇಕು ಅದರಂತೆ ಅಗತ್ಯ ಚಿಕಿತ್ಸೆ ನೀಡಬೇಕು. ರೋಗ ಲಕ್ಷಣಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ ಸೂಕ್ತ ಚಿಕಿತ್ಸೆಗೆ ಸಲಹೆ ನೀಡಬೇಕು ಎಂದು ತಿಳಿಸಿದರು.
ಜಾಗೃತಿ ಬಿತ್ತಿ ಪತ್ರಗಳ ಬಿಡುಗಡೆ:
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು. ಅದೇ ರೀತಿಯಲ್ಲಿ ಜಿಲ್ಲಾಡಳಿತ ಮೂಲಕ ಕುಷ್ಠರೋಗ ಅಭಿಯಾನದ ಕುರಿತು ಸಂದೇಶ ನೀಡಿದರು.
ಜಿಲ್ಲಾಡಳಿತ ಸಂದೇಶ:
“ಡಿಸೆಂಬರ್ 27, 2023 ರಿಂದ ಜನವರಿ 11, 2024 ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಕುಷ್ಠರೋಗ ಪ್ರಕರಣಗಳ ಪತ್ತೆ ಹಚ್ಚುವಿಕೆ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ, ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರು ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ, ಆದ್ದರಿಂದ ತಾವೆಲ್ಲರೂ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಈ ಅಭಿಯಾನವನ್ನು ಯಶಸ್ವಿಯಾಗಿಸಿ, ಭಾರತ ದೇಶವನ್ನು ಕುಷ್ಠರೋಗ ಮುಕ್ತ ಮಾಡುವ ಗಾಂಧೀಜಿಯವರ ಕನಸನ್ನು ನನಸಾಗಿಸೋಣ”
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕೋಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ವಿಠ್ಠಲ ಶಿಂಧೆ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಗಡೇದ, ಎಲ್ಲಾ ತಾಲೂಕು ತಹಶೀಲ್ದಾರಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಗೀತಾ ಕಾಂಬಳೆ, ಜಿಲ್ಲಾ ಸಮೀಕ್ಷಾಧಿಕಾರಿ ಡಾ. ಸಂಜಯ ದೊಡ್ಡಮನಿ ಮತ್ತು ಜಿಲ್ಲೆಯ ತಾಲೂಕಾ ಆರೋಗ್ಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.