ನವದೆಹಲಿ: ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಷ್ಟ್ರಪತಿ ಆಳ್ವಿಕೆಯನ್ನು ಭಾನುವಾರ ಹಿಂಪಡೆದಿದೆ. ಹೀಗಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಈಗ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ.
ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯ ನಂತರ ಬಹುಮತ ಪಡೆದ ಒಮರ್ ಅಬ್ದುಲ್ಲಾ ಅವರು ಹೊಸ ಸರ್ಕಾರವನ್ನು ರಚಿಸಲು ಹಕ್ಕು ಮುಂದಿಟ್ಟಿದ್ದರು.
ಇತ್ತೀಚೆಗೆ ನಡೆದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಜಯಭೇರಿ ಬಾರಿಸಿದ್ದು, ಸರ್ಕಾರ ರಚನೆಗೆ ಸಜ್ಜಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಅವರು ಮೈತ್ರಿಕೂಟದ ನಾಯಕರಾಗಿ ಆಯ್ಕೆಯಾಗಿದ್ದಾರೆ.ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಔಪಚಾರಿಕವಾಗಿ ವಿಭಜಿಸಿದ ನಂತರ ಅಕ್ಟೋಬರ್ 31, 2019 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಆಡಳಿತವನ್ನು ಹೇರಲಾಯಿತು.
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ಅನ್ನು ಆಗಸ್ಟ್ 5, 2019 ರಂದು ಸಂಸತ್ತು ಅಂಗೀಕರಿಸಿತು. ಹಿಂದಿನ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ಸಹ ಆ ದಿನ ರದ್ದುಗೊಳಿಸಲಾಯಿತು.ಜೂನ್ 19, 2018 ರಂದು ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಮುರಿದುಬಿದ್ದ ನಂತರ ಈ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಗುರುವಾರ ಒಮರ್ ಅಬ್ದುಲ್ಲಾ ಅವರನ್ನು ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು, ಇದು ಅವರ ಎರಡನೇ ಅವಧಿಗೆ ಅವರು ಮುಖ್ಯಮಂತ್ರಿಯಾಗಲು ದಾರಿ ಮಾಡಿಕೊಟ್ಟಿತು.