ದೆಹಲಿ : ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರು, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯನ್ನು ಘೋಷಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 22 ರಂದು ಅಧಿಸೂಚನೆಗಳು ಪ್ರಕಟವಾಗಲಿವೆ. ನಾಮಪತ್ರ ಹಿಂಪಡೆಯಲು ನವೆಂಬರ್ 4 ಕೊನೆಯ ದಿನವಾಗಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇದೀಗ ಎನ್ ಡಿ ಎ ಅಧಿಕಾರದಲ್ಲಿದೆ. ಏಕನಾಥ ಶಿಂಧೆ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಬಣ ಮಹಾರಾಷ್ಟ್ರದಲ್ಲಿ ಮೇಲುಗೈ ಸಾಧಿಸಿತ್ತು.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆಗಳತ್ತ ಎಲ್ಲರ ಚಿತ್ತ :
ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ, ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.ಜಾರ್ಖಂಡ್ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ ಜಾರ್ಖಂಡ್ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ಎರಡನೇ ಹಂತದ ಚುನಾವಣೆ ನವೆಂಬರ್ 20ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಅಕ್ಟೋಬರ್ 28ರಂದು ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 1 ಕೊನೆಯ ದಿನವಾಗಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಮಹಾರಾಷ್ಟ್ರ ವಿಧಾನಸಭೆಯು 288 ಸ್ಥಾನಗಳನ್ನು ಹೊಂದಿದ್ದು, ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದೆ. ಜಾರ್ಖಂಡ್ ವಿಧಾನಸಭೆಯು 81 ಸ್ಥಾನಗಳನ್ನು ಹೊಂದಿದ್ದು, ಇದರ ಅವಧಿ 2025ರ ಜನವರಿ 5ರಂದು ಕೊನೆಗೊಳ್ಳಲಿದೆ.
ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಸರ್ಕಾರವು ಆಡಳಿತ ನಡೆಸಿದ್ದು, ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಶರದ್ ಪವಾರ್ (ಶರದ್ಚಂದ್ರ ಪವಾರ್) ನೇತೃತ್ವದ ಎನ್ಸಿಪಿ (ಎಂವಿಎ) ಅನ್ನು ಒಳಗೊಂಡಿರುವ ಪ್ರತಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ವಿರುದ್ಧ ಸ್ಪರ್ಧಿಸಲಿದೆ.