ಬೆಂಗಳೂರು : ವಿಧಾನಸಭೆ ಉಪಚುನಾವಣೆಯಲ್ಲಿ ಚನ್ನಪಟ್ಟಣದ ಕ್ಷೇತ್ರದ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸೋಮವಾರ ಕರ್ನಾಟಕ ಹೈಕೋರ್ಟ್ ನಿರ್ಬಂಧಿಸಿದೆ.
ಮಾಜಿ ಸಚಿವ ಸಿ ಪಿ ಯೋಗೇಶ್ವರ ಪತ್ನಿ ಪಿ.ವಿ. ಶೀಲಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಏಕಸದಸ್ಯ ಪೀಠ ಮಧ್ಯಂತರ ಆದೇಶ ಮಾಡಿದೆ. ಪತಿ ಸಿ.ಪಿ. ಯೋಗೇಶ್ವರ ಉಪಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ಮಲಮಗಳಾದ ನಿಶಾ ಯೋಗೇಶ್ವರ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿಯಾದ ಮಾನಹಾನಿಕರ, ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಅರ್ಜಿಯ ಮಧ್ಯಂತರ ಮನವಿ ಪರಿಗಣಿಸಿರುವ ಹೈಕೋರ್ಟ್, ಪ್ರತಿವಾದಿಗಳಾದ ನಿಶಾ ಅವರು ಇನ್‌ಸ್ಟಾಗ್ರಾಂ, ಎಕ್ಸ್ ಕಾರ್ಪ್ (ಟ್ವಿಟರ್), ಗೂಗಲ್ ಮತ್ತು ಯೂಟ್ಯೂಬ್ ಜಾಲತಾಣಗಳಲ್ಲಿ ಯೋಗೇಶ್ವರ ಅವರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ.