ಶಿಗ್ಗಾವಿ: ಶಿಗ್ಗಾವಿ-ಸವಣೂರು ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಸೃಷ್ಟಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಪರ ಬಾಡಾ ಗ್ರಾಮದಲ್ಲಿ ಪ್ರಚಾರ ನಡೆಸಿದ ಸಚಿವರು, ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಕಾಂಗ್ರೆಸ್ ಗೆಲುವು ಶತಸಿದ್ಧ ಎಂದರು‌.

ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ಸಂಚರಿಸುತ್ತಿದ್ದು, ಜನರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಬೆಂಬಲ ಕೊಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಯಾಸೀರ್ ಖಾನ್ ಪಠಾಣ್ ಸೋತರೂ ಮನೆಯಲ್ಲಿ ಕುಳಿತುಕೊಳ್ಳದೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ ಬಂದಿದ್ದಾರೆ. ಇಂಥ ಅಭ್ಯರ್ಥಿ ಕ್ಷೇತ್ರದ ಶಾಸಕರಾಗಿ ಆಯ್ಕೆ ಆಗಬೇಕು ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹರಿದು ಹಂಚಿಹೋಗಿದ್ದ ಭಾರತವನ್ನು ವಿಶ್ವ ಭೂಪಟದಲ್ಲಿ ಅಖಂಡ ಭಾರತವನ್ನಾಗಿ ಮಾಡಿದ್ದೇ ಕಾಂಗ್ರೆಸ್ ಪಕ್ಷ. ಕರೆಂಟ್, ಮೊಬೈಲ್,‌ ವಿದ್ಯುತ್ ಇಲ್ಲದ ಕಾಲದಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು ಕಾಂಗ್ರೆಸ್ ಪಕ್ಷದ ಸರ್ಕಾರಗಳು.
ಭಾರತದಲ್ಲಿ ಏರ್ಪೋರ್ಟ್, ಬ್ರಿಡ್ಜ್, ಕರೆಂಟ್, ಸಾಲ ಮೇಳ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇ ಕಾಂಗ್ರೆಸ್ ಸರ್ಕಾರ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈಗ ಪ್ರತಿಯೊಂದು ಅಗತ್ಯ ವಸ್ತುಗಳಿಗೆ ಜಿಎಸ್ಟಿ ಹಾಕುವ ಮೂಲಕ ಬಿಜೆಪಿ ಸರ್ಕಾರ ಜನರ ಜೀವ ಹಿಂಡುತ್ತಿದೆ.‌ ಮೋದಿ ಸರ್ಕಾರಕ್ಕೆ ಅಂಬಾನಿ -ಅದಾನಿ‌ ಅವರ ಹಿತವೇ ಮುಖ್ಯವಾಗಿದೆ. ಬಡ ಜನರು‌ ಅವರಿಗೆ ಬೇಕಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.