ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ, ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಹಾಗೂ ಡಿಜಿಟಲ್ ಗ್ರಂಥಾಲಯ ಸಹಯೋಗದೊಂದಿಗೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಡಿಜಿಟಲ್ ಸಾಕ್ಷರತೆ ಬಗ್ಗೆ ಅರಿವು ಕಾರ್ಯಕ್ರಮವು ಹೆಬ್ರಿ ಗ್ರಂಥಾಲಯ ಕೇಂದ್ರದಲ್ಲಿ ನ. 16 ರಂದು ನಡೆಯಿತು.
ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವಿದ್ಯಾಧರ ಹೆಗ್ಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಾನವನ ಬದುಕಿಗೆ ಪುಸ್ತಕಗಳು ಸಾಕಷ್ಟು ಮಾರ್ಗದರ್ಶನ ನೀಡುತ್ತಿದೆ. ಎಲ್ಲಾ ಮೂಲಗಳಿಂದ ಜ್ಞಾನವನ್ನು ಸಂಪಾದಿಸಿ ನಿಮ್ಮ ಕೌಶಲ್ಯವನ್ನು ಹೆಚ್ಚಿಸಿ ಕೊಳ್ಳಬೇಕೆಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ ಘಟಕ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಮಾತನಾಡಿ ಕನ್ನಡವನ್ನು ಶ್ರೀಮಂತಗೊಳಿಸಲು ಸಾರ್ವಜನಿಕರು, ವಿದ್ಯಾರ್ಥಿಗಳು ಪುಸ್ತಕಗಳನ್ನು, ಪತ್ರಿಕೆಗಳನ್ನು ಓದುವುದರಿಂದ ಪ್ರಾಪಂಚಿಕ ಜ್ಞಾನ ತಿಳಿಯಲು ಸಹಕಾರಿಯಾಗುತ್ತದೆ. ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಬಳಸಿಕೊಂಡಲ್ಲಿ ವಿದ್ಯಾರ್ಥಿಗಳ ಭವಿಷ್ಯವು ಉಜ್ವಲವಾಗಲಿದೆ ಎಂದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ರಾದ ಹೆಬ್ರಿಯ ಸಮಾಜ ಸೇವಕ ಎಚ್. ಜನಾರ್ದನ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.p
ಸನ್ಮಾನಿತರು ಮಾತನಾಡಿ ನಾನು ಹಲವು ಸಂಘ ಸಂಸ್ಥೆಗಳಲ್ಲಿ ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಪದಾಧಿಕಾರಿಯಾಗಿ ಸಮಾಜಮುಖಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ನನ್ನನ್ನು ಸನ್ಮಾನಿಸುದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದರು.ಉಡುಪಿ ಜಿಲ್ಲಾ ಸಂಯೋಜಕ ರೀನಾ ಹೆಗ್ಡೆ ಡಿಜಿಟಲ್ ಸಾಕ್ಷರತೆ ಬಗ್ಗೆ ಮಾಹಿತಿ ನೀಡಿದರು.
ಗ್ರಂಥಾಲಯ ಓದುಗರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿದ್ದು ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು.
ಗ್ರಂಥಪಾಲಕಿ ಪುಷ್ಪಾವತಿ ಶೆಟ್ಟಿ ವರದಿ ವಾಚಿಸಿ ಪ್ರಾಸ್ತಾವಿಕ ಮಾತನಾಡಿದರು. ಕ.ಸಾ. ಪ. ಗೌರವ ಕಾರ್ಯದರ್ಶಿ ಮಂಜುನಾಥ ಶಿವಪುರ ಸ್ವಾಗತಿಸಿ ರತ್ನಾವತಿ ನಿರೂಪಿಸಿದರು. ಕ. ಸಾ. ಪ. ಪದಾಧಿಕಾರಿ ವೀಣಾ ಆರ್. ಭಟ್ ವಂದಿಸಿದರು.