ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಜನವರಿ 14ರಂದು ಬೆಳಗ್ಗೆ 11ಕ್ಕೆ ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಹೋರಾಟಕ್ಕೆ ಚಾಲನೆ ನೀಡಲಾಗುತ್ತಿದೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು. ಲಾಠಿ ಚಾರ್ಜ್ ನಲ್ಲಿ ಗಾಯಗೊಂಡ ಹೋರಾಟಗಾರರಿಗೆ ಲಿಂಗಾಯತ ಪಂಚಮಸಾಲಿ ಮೀಸಲಾತಿವೀರ ಎಂಬ ಬಸವ ರಕ್ಷೆ ನೀಡಲಾಗುತ್ತದೆ ಎಂದು ಹೇಳಿದರು.
ನಮ್ಮ ಈ ಸಲದ ಹೋರಾಟದಲ್ಲಿ ರಾಜ್ಯದಲ್ಲಿ ಎಲ್ಲಾ ಹಳ್ಳಿಹಳ್ಳಿಗಳಲ್ಲಿ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ನಡೆಸಲಾಗುವುದು. ಈ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಪಂಚಮಸಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.