ಮೂಡಲಗಿ (ಬೆಂಗಳೂರು): ಕಬ್ಬು ಬೆಳೆಗಾರರುಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ, ಅವರಿಗೆ ನ್ಯಾಯಯುತ ಬೆಲೆ ಹಾಗೂ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ರಾಜ್ಯಸಭಾ ಮಾಜಿ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಕೇಂದ್ರ ಸಕ್ಕರೆ ಉನ್ನತ ಮಟ್ಟದ ಜಂಟಿ ಸಮಿತಿಯ ಅಧ್ಯಕ್ಷ ಪ್ರೊ. ರಮೇಶ್ ಚಂದ್ ಅವರನ್ನು ಭೇಟಿಯಾದ ಈರಣ್ಣ ಕಡಾಡಿ ಅವರು, ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಕಬ್ಬಿನ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆಯನ್ನು (ಎಫ್ಆರ್ಪಿ) ನಿಗದಿಪಡಿಸುವಾಗ ರೈತರ ಉತ್ಪಾದನಾ ವೆಚ್ಚ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಗಣಿಸಬೇಕು. ಪ್ರಸಕ್ತ ಎಫ್ಆರ್ಪಿ ದರವನ್ನು ಮರುಪರಿಶೀಲಿಸಿ, ರೈತರಿಗೆ ಸೂಕ್ತ ಆದಾಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ಕಬ್ಬು ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸುವುದು, ಕಬ್ಬು ಕಟಾವು ಮತ್ತು ಸಾಗಣೆ ವೆಚ್ಚದ ಮಿತಿಯನ್ನು ಹೆಚ್ಚಿಸುವುದು, ಸಕ್ಕರೆ ಕಾರ್ಖಾನೆಗಳಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳನ್ನು ಅಳವಡಿಸಿ ತೂಕದಲ್ಲಿ ಪಾರದರ್ಶಕತೆ ಕಾಪಾಡುವುದು ಹಾಗೂ ಸಕ್ಕರೆ ಕಾರ್ಖಾನೆಗಳ ಉಪ-ಉತ್ಪನ್ನಗಳಿಂದ ದೊರೆಯುವ ಲಾಭದಲ್ಲಿ ರೈತರಿಗೂ ಪಾಲು ನೀಡುವ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರು.
ಕಬ್ಬು ಬೆಳೆಗಾರರ ಆರ್ಥಿಕ ಸಂಕಷ್ಟ ನಿವಾರಣೆಗೆ ಸರ್ಕಾರ ಆದ್ಯತೆ ನೀಡಬೇಕು. ರೈತರು ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆತು, ಉತ್ಪಾದನಾ ವೆಚ್ಚವನ್ನು ಭರಿಸುವುದರ ಜೊತೆಗೆ ಕುಟುಂಬ ನಿರ್ವಹಣೆಗೆ ಅಗತ್ಯವಾದ ಆದಾಯ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಮಿತಿಗಳು ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಡಾ. ವಿಶ್ವನಾಥ ಪಾಟೀಲ, ಮಹಾಂತೇಶ ದೊಡ್ಡಗೌಡರ, ಗೋವಿಂದ ಕೊಪ್ಪದ ಸೇರಿದಂತೆ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


,


















