ಬೆಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಮೇಲೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣದ ಸಂಬಂಧ ಮುಂದಿನ ವಿಚಾರಣೆ ವರೆಗೆ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಹಾಗೂ ಮತ್ತಿಬ್ಬರು ನಿರ್ದೇಶಕರಾಗಿದ್ದ ವಸಂತ ಪಾಟೀಲ ಮತ್ತು ಶಂಕರ ಪವಾಡೆ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ನಿರ್ದೇಶನ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.
ಅರ್ಜಿದಾರ ರಮೇಶ ಜಾರಕಿಹೊಳಿ ಪರ ವಕೀಲರು, ಫೆಬ್ರವರಿ 26ರಂದು ಜಾರಕಿಹೊಳಿ ಪುತ್ರನ ವಿವಾಹ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಬಂಧಿಸುವ ಸಾಧ್ಯತೆಯಿದೆ. ಆದ ಹಿನ್ನೆಲೆಯಲ್ಲಿ ರಕ್ಷಣೆ ನೀಡಬೇಕು ಎಂದು ಪೀಠಕ್ಕೆ ತಿಳಿಸಿದರು.
ಈ ಅಂಶ ದಾಖಲಿಸಿಕೊಂಡ ಪೀಠವು ಈ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯವರೆಗೂ ಪ್ರಕರಣದ ಮೊದಲ ಅರ್ಜಿದಾರರ (ರಮೇಶ್ ಜಾರಕಿಹೊಳಿ) ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಿತು. ಆದರೆ, ಪ್ರಕರಣದ ಇತರೆ ಅರ್ಜಿದಾರರ ವಿರುದ್ಧ ತನಿಖೆ ನಡೆಸುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿಸಿದ ಪೀಠ ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣದ ಹಿನ್ನೆಲೆ: ಬೆಳಗಾವಿಯ ಗೋಕಾಕದಲ್ಲಿರುವ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ನಲ್ಲಿ ಯಂತ್ರೋಪಕರಣ ಅಳವಡಿಕೆ, ವಿಸ್ತರಣೆ ಮತ್ತು ನಿರ್ವಹಣೆಗಾಗಿ ಅರ್ಜಿದಾರರು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಮತ್ತು ಅದರ ಸಮೂಹದ ಬ್ಯಾಂಕ್ಗಳಲ್ಲಿ ಅವಧಿ ಸಾಲ, ದುಡಿಯುವ ಬಂಡವಾಳದ ರೂಪದಲ್ಲಿ 12.07.2013 ರಿಂದ 31.03.2017ರ ಅವಧಿಯಲ್ಲಿ ₹232.88 ಕೋಟಿ ಸಾಲ ಪಡೆದಿದ್ದರು. ಇದು ₹439.7 ಕೋಟಿಗೆ ಏರಿಕೆಯಾಗಿದ್ದರೂ ಅದನ್ನು ಪಾವತಿಸಿರಲಿಲ್ಲ.
ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪೆನಿಯಲ್ಲಿ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ವಸಂತ ಮತ್ತು ಶಂಕರ ಅವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ಅರ್ಜಿದಾರರು ಕಂಪೆನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಸಂಬಂಧಪಡದ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಿಸಲಾಗಿದೆ. ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ವಿ ವಿ ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ಗಳಾದ 406, 420 & 34ರ ಅಡಿ ಪ್ರಕರಣ ದಾಖಲಾಗಿದೆ.