ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ನ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. 2022ರಲ್ಲಿ ಜಾರಿ ನಿರ್ದೇಶನಾಲಯದ ವಿರುದ್ಧ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರಿಂದ ಇಬ್ಬರ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ಜಾರಿ ನಿರ್ದೇಶನಾಲಯದ ವಿರುದ್ಧ 2022 ರಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್ಐಆರ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿತ್ತು.
ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.