ಸುವರ್ಣ ಸೌಧಕ್ಕೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ :
ಸುವರ್ಣಸೌಧ ಸಮರ್ಪಕ ನಿರ್ವಹಣೆಗೆ ಸೂಚನ
ಬೆಳಗಾವಿ: ಸುವರ್ಣ ವಿಧಾನಸೌಧದ ನಿರ್ವಹಣೆಯಲ್ಲಿ ಈ ಹಿಂದೆ ಕಂಡುಬಂದಿದ್ದ ಕೆಲವೊಂದು ನ್ಯೂನತೆಗಳನ್ನು ಸರಿಪಡಿಸಲು ನೀಡಲಾಗಿರುವ ನಿರ್ದೇಶನಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚನೆ ನೀಡಿದರು.
ಪೂರ್ವನಿಗದಿತ ಕಾರ್ಯಕ್ರಮದಂತೆ ಮಂಗಳವಾರ(ಮಾ.೧೯) ಭೇಟಿ ನೀಡಿದ ವಿಧಾನ ಪರಿಷತ್ತಿನ ಸಭಾಪತಿ ಹಾಗೂ ವಿಧಾನಸಭೆ ಸಭಾಧ್ಯಕ್ಷರು ಬೆಳಗಾವಿ ಸುವರ್ಣ ವಿಧಾನಸೌಧದ ನಿರ್ವಹಣೆಯನ್ನು ಪರಿಶೀಲಿಸಿದರು.
೨೦೨೩ ರ ಡಿಸೆಂಬರ್ ನಲ್ಲಿ ಜರುಗಿದ ವಿಧಾನಮಂಡಳದ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಪರಿಷತ್ ಹಾಗೂ ವಿಧಾನಸಭೆಯ ಸಭಾಂಗಣ ನಿರ್ವಹಣೆಯ ಕುರಿತು ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದರು.
ಅಧಿಕಾರಿಗಳಿಗೆ ಅಭಿನಂದನೆ:
ಡಿಸೆಂವರ್ ೨೦೦೩ ರಲ್ಲಿ ನಡೆದ ವಿಧಾನಮಂಡಳ ಅಧಿವೇಶನದ ಯಶಸ್ವಿಗೆ ವಿವಿಧ ಸಮಿತಿಗಳ ಮುಖ್ಯಸ್ಥರು ಹಾಗೂ ಸದಸ್ಯರುಗಳು ಶ್ರಮಿಸುವ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಸಭಾಪತಿ ಹೊರಟ್ಟಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಯಾವುದೇ ಅನಾನುಕೂಲ ಆಗದಂತೆ ಅಧಿವೇಶನವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ನಡೆಸಿದ್ದು, ಅವರೆಲ್ಲರೂ ಅಭಿನಂದನಾರ್ಹರು ಎಂದರು.
ಬೆಳಗಾವಿಯಲ್ಲಿ ಪ್ರತಿವರ್ಷ ಅಧಿವೇಶನವು ಇದೇ ರೀತಿ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಅಧಿವೇಶನವು ಅತ್ಯಂತ ಯಶಸ್ವಿಯಾಗಿದ್ದು, ಅತೀ ಹೆಚ್ಚು ಚರ್ಚೆ ನಡೆದಿರುವುದರ ಜತೆಗೆ ಅತೀ ಹೆಚ್ಚು ಮಸೂದೆಗಳು ಕೂಡ ಅಂಗೀಕರಿಸಲಾಗಿರುತ್ತದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾಡಳಿತ, ಪೊಲೀಸ್ ಸೇರಿದಂತೆ ಸಾವಿರಾರು ಜನರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಅಧಿವೇಶನ ಯಶಸ್ವಿಗೊಳಿಸಿದ್ದರಿಂದ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತಿತರರು ತಮ್ಮ ಅನಿಸಿಕೆ ಹೇಳಿದರು.
ಕರ್ನಾಟಕ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನಸಭೆ ಕಾರ್ಯದರ್ಶಿ ಮಹಾಲಕ್ಷ್ಮಿ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಅರುಣಕುಮಾರ್ ಪಾಟೀಲ ಉಪಸ್ಥಿತರಿದ್ದರು.