ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ.

2023-24ನೇ ಸಾಲಿನ ಫಲಿತಾಂಶವನ್ನು ರಾಜ್ಯದ ಎಲ್ಲ ಶಾಲೆಗಳಲ್ಲಿ ಏಪ್ರಿಲ್ 8ರಂದು ಪ್ರಕಟಿಸುವಂತೆ ಈ ಹಿಂದೆ ಸೂಚಿಸಲಾಗಿತ್ತು. ಆದರೆ, ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ಇನ್ನೂ ಫಲಿತಾಂಶ ಪ್ರಕಟವಾಗಿರಲಿಲ್ಲ.

2024-25ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29ರಿಂದ ಆರಂಭಗೊಳ್ಳಲಿದೆ. ಕಳೆದ ಶೈಕ್ಷಣಿಕ ಸಾಲಿನ ಫಲಿತಾಂಶ ಪ್ರಕಟ ಆಗದಿರುವ ಪರಿಣಾಮ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ತರಗತಿಗೆ ಪ್ರವೇಶ, ದಾಖಲಾತಿ, ಪ್ರವೇಶ ಶುಲ್ಕ ಪಾವತಿ ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆಗೆ ಪ್ರಮಾಣ ಪತ್ರ, ಪ್ರಗತಿ ಪತ್ರ, ವ್ಯಾಸಂಗ ಪ್ರಮಾಣ ಪತ್ರ ವಿತರಿಸಲು ಶಾಲೆಗಳಿಗೆ ಸಾಧ್ಯವಾಗಿರಲಿಲ್ಲ. ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ನಡೆದಿರುವ ಪರೀಕ್ಷೆಗಳ ಮೌಲ್ಯಾಂಕನ ಆಧರಿಸಿ ಮುಂದಿನ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಬಿ.ಬಿ.ಕಾವೇರಿ ಸೂಚಿಸಿದ್ದಾರೆ.