ಬೆಂಗಳೂರು: : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 23 ರಿಂದ 25 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಮೇ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಉಳಿದಂತೆ ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 24 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಮತ್ತು ಬಳ್ಳಾರಿ, ಚಿಕ್ಕಬಳ್ಳಾಪುರ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾಜ್ಯದಲ್ಲಿ ಈ ವರ್ಷ ಮೇ ತಿಂಗಳಲ್ಲಿ ವಾಡಿಕೆಯಂತೆ ಮಳೆಯಾಗುತ್ತಿದೆ, ಈವರೆಗೆ ಇದೇ ಸಮಯದಲ್ಲಿ ಸುರಿದ ಸರಾಸರಿ ಮಳೆಗೆ ಹೋಲಿಸಿದರೆ ಈ ವರ್ಷ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ.
ಐಎಂಡಿ(IMD) ಪ್ರಕಾರ, ಕರ್ನಾಟಕದಲ್ಲಿ ಈ ವರ್ಷ ಮಾರ್ಚ್‌ನಿಂದ ಮೇ 21ರ ನಡುವೆ 107.8 ಮಿಮೀ ಮಳೆ ಸುರಿದಿದೆ. ಪ್ರತಿ ವರ್ಷ ಈ ಸಮಯದಲ್ಲಿ 87.4 ಮಿಮೀ ಮಳೆ ದಾಖಲಾಗುತ್ತಿತ್ತು, ಇದರಿಂದಾಗಿ ಈ ವರ್ಷ 23 ಮಿಮೀ ಹೆಚ್ಚುವರಿ ಮಳೆ ಬಿದ್ದಿದೆ.

ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದೆ.
IMD ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ 217.9 ಮಿಮೀ, ಹಾಸನದಲ್ಲಿ 194.3 ಮಿಮೀ, ಕೊಡಗು 194 ಮಿಮೀ ಮತ್ತು ಚಾಮರಾಜನಗರದಲ್ಲಿ 153.8 ಮಿಮೀ ಮಳೆ ದಾಖಲಾಗಿದೆ. ಅದೇ ರೀತಿ, ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡದಲ್ಲಿ 178.1 ಮಿಮೀ ಮಳೆಯಾಗಿದ್ದು, ಧಾರವಾಡ ಮತ್ತು ಗದಗದಲ್ಲಿ ಕ್ರಮವಾಗಿ 120.9 ಮಿಮೀ ಮತ್ತು 120.3 ಮಿಮೀ ಮಳೆ ದಾಖಲಾಗಿದೆ.