| Latest Version 9.0.7 |

State News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಜೋರು ; 4 ದಿನ ಭಾರೀ ಮಳೆ

 

 

ಬೆಂಗಳೂರು: ಜುಲೈ 5 ರಿಂದ 8ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಒಂದೆರಡು ಸ್ಥಳಗಳಲ್ಲಿ ಭಾರಿಯಿಂದ ಅತಿ ಭಾರಿ (115.5ಮಿ.ಮಿ ನಿಂದ 204.4ಮಿಮಿ) ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಜುಲೈ 5ರಂದು ಆರೆಂಜ್‌ ಅಲರ್ಟ್‌ಘೋಷಿಸಲಾಗಿದೆ. ಜೂನ್‌ ೬ರಿಂದ ೮ರವರೆಗೆ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಜುಲೈ 5 ರಿಂದ 8ರವರೆಗೆ ಭಾರೀ ಮಳೆ

ಜುಲೈ 5 ರಿಂದ 7ವರೆಗೂ ಮಲೆನಾಡು ಭಾಗದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಮೂರು ದಿನ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜುಲೈ 8ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ, ಬಳ್ಳಾರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 5 ಹಾಗೂ 6 ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ 7 ಹಾಗೂ 8ರಂದು ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Team Udayaprabha
";