ನವದೆಹಲಿ: ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಶೀಘ್ರ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.
‘ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು ತ್ವರಿತ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಸರಣಿ ಕ್ರಮಗಳಲ್ಲಿ ಇದೂ ಒಂದಾಗಿದೆ’ ಎಂದು ಉಲ್ಲೇಖಿಸಿದ್ದಾರೆ.
‘ನಮ್ಮ ಯುವಜನರ ಕ್ಷೇಮ ಮತ್ತು ಭವಿಷ್ಯಕ್ಕಿಂತ ಮುಖ್ಯವಾದದ್ದು ಏನೂ ಇಲ್ಲ. ನಮ್ಮ ಯುವಜನರ ಭವಿಷ್ಯ ಹಾನಿ ಮಾಡಲು ಪ್ರಯತ್ನಿಸುವವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ತ್ವರಿತ ನ್ಯಾಯಾಲಯವಲ್ಲ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೇಕು: ಮೋದಿಗೆ ಸಿಜೆಪಿ:
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ
ಶೀಘ್ರ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಬಲವಾಗಿ ತಿರಸ್ಕರಿಸಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರನ್ನು ತ್ವರಿತ ವಿಚಾರಣೆಗೆ ಒಳಪಡಿಸಲು ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ತ್ವರಿತ ನ್ಯಾಯಾಲಯ ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕ್ಷಣಗಳಲ್ಲೇ ಸಿಜೆಪಿಯಿಂದ ಈ ಪ್ರತಿಕ್ರಿಯೆ ಬಂದಿದೆ.
‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲೇಬೇಕು’ ಎಂದು ಸಿಜೆಪಿ ತನ್ನ ‘ಎಕ್ಸ್’ ಪೋಸ್ಟ್‌ನಲ್ಲಿ ಬರೆದುಕೊಂಡಿದೆ.


,
,
















