| Latest Version 9.0.7 |

State News

ಹೆಬ್ರಿಯಲ್ಲಿ ಪ್ರಥಮ ಚಿಕಿತ್ಸೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿ

ಹೆಬ್ರಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹೆಬ್ರಿ ತಾಲ್ಲೂಕು ಹಾಗೂ ಅಲಯನ್ಸ್ ಕ್ಲಬ್ ಹೆಬ್ರಿ ಇವುಗಳ ಜಂಟಿ ಆಶ್ರಯದಲ್ಲಿ, ಹೆಬ್ರಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ “ಪ್ರಥಮ ಚಿಕಿತ್ಸೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ” ಕಾರ್ಯಕ್ರಮವನ್ನು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿಯ ಉಪಪ್ರಾಂಶುಪಾಲ ದಿವಾಕರ ಮರಕಾಲ ಅವರು, “ಆಕಸ್ಮಿಕವಾಗಿ ಸಂಭವಿಸುವ ಆಪತ್ತು ಅಥವಾ ಅಪಘಾತಗಳ ಸಂದರ್ಭದಲ್ಲಿ ತಕ್ಷಣವೇ ನೀಡುವ ಪ್ರಥಮ ಚಿಕಿತ್ಸೆಯು ಜೀವ ಉಳಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಹಾಗೂ ಸಾರ್ವಜನಿಕರೂ ಪ್ರಥಮ ಚಿಕಿತ್ಸೆಯ ಮೂಲಭೂತ ಜ್ಞಾನವನ್ನು ಹೊಂದುವುದು ಇಂದಿನ ಅಗತ್ಯವಾಗಿದೆ” ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೊಳಲಗಿರಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುರೇಶ್ ನಾಯಕ್ ಅವರು ವಿದ್ಯಾರ್ಥಿಗಳಿಗೆ ಹಾಗೂ ಭಾಗವಹಿಸಿದವರಿಗೆ ತುರ್ತು ಸಂದರ್ಭಗಳಲ್ಲಿ ಹೇಗೆ ಪ್ರಥಮ ಚಿಕಿತ್ಸೆ ನೀಡಬೇಕು, ಜೀವ ರಕ್ಷಣೆ ಮಾಡುವುದು ಹೇಗೆ ಎಂಬುದರ ಕುರಿತು ವಿವರವಾದ ಮಾಹಿತಿ ನೀಡಿ, ಪ್ರಾತ್ಯಕ್ಷಿಕೆಯ ಮೂಲಕ ಕಾರ್ಯರೂಪದಲ್ಲಿ ತೋರಿಸಿಕೊಟ್ಟರು.

ಅಧ್ಯಕ್ಷತೆ ವಹಿಸಿದ್ದ ಹೆಬ್ರಿ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯ ಚೇರ್ಮನ್ ವೀಣಾ ಆರ್. ಭಟ್ ಅವರು, ರೆಡ್ ಕ್ರಾಸ್ ಸಂಸ್ಥೆಯು ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಅತ್ಯಂತ ಉಪಯುಕ್ತವಾಗಿವೆ ಎಂದು ಅಭಿಪ್ರಾಯಪಟ್ಟರು.

ಅಲಯನ್ಸ್ ಕ್ಲಬ್ ಹೆಬ್ರಿಯ ಅಧ್ಯಕ್ಷ ಬಾಲಚಂದ್ರ M, ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯ ವೈಸ್ ಛೇರ್ಮನ್ ಆಗಿರುವ ಡಾ. ವಿದ್ಯಾಧರ ಹೆಗ್ಡೆ.S ಮುಂತಾದ ಗಣ್ಯರು ಉಪಸ್ಥಿತರಿದ್ದರು. ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರೂ ಹಾಗೂ ಅಧ್ಯಾಪಕ ಮಂಜುನಾಥ ಕುಲಾಲ ನಿರೂಪಿಸಿದರು. ಹೆಬ್ರಿ ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯ ಕೋಶಾಧಿಕಾರಿ ಪ್ರಕಾಶ್ ಕುಮಾರ್ ಶೆಟ್ಟಿ ವಂದಿಸಿದರು. ಅಭಿಲಾಷ್ ಸರ್ ಸಹಕರಿಸಿದರು.
ಸಂಸ್ಥೆಯ ಪದಾಧಿಕಾರಿಗಳು, ನಿರ್ದೇಶಕರು, ಸರ್ವ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Team Udayaprabha
";