ಬೆಳಗಾವಿ :
ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಮಂಗಳವಾರ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿಯರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತಿಭಟನೆಯಿಂದ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿ, ಸಕ್ಕರೆಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ರಾಜ್ಯದಲ್ಲಿ ಉತ್ಪಾದನೆಯಾಗುವ ಸಂಪೂರ್ಣ ಎಥೆನಾಲ್ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಒತ್ತಾಯಿಸಿದರು.
ಪ್ರತಿಭಟನಾಕಾರರು ಕೈಯಲ್ಲಿ ಪೊರಕೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಘೋಷಣೆ ಕೂಗಿದ ರೈತರು, ರೈತ ಮಹಿಳೆಯರೂ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಅಸಮಾಧಾನ ಹೊರಹಾಕಿದರು. ಕೆಲ ರೈತರು ಉರುಳು ಸೇವೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು.
ರೈತರು ಹಿರೇಬಾಗೇವಾಡಿ ಟೋಲ್ ಗೇಟ್ ಬಂದ್ ಮಾಡಿ, ಎತ್ತು ಮತ್ತು ಚಕ್ಕಡಿ ಬಂಡಿಗಳನ್ನು ತಂದು ಪ್ರತಿಭಟನೆ ನಡೆಸಿದರು. ಬಾರಕೋಲ್‌ಗಳಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ರೈತರು, ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ:
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ತಡೆ ಹಿನ್ನೆಲೆಯಲ್ಲಿ ಮೂರು ಕಡೆಗಳಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದರು.
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಿ ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.
Udaya Prabha > State News > ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಲು ಆಗ್ರಹಿಸಿ ಟೋಲ್ ಗೇಟ್ ಬಳಿ ಪ್ರತಿಭಟನೆ
ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸಲು ಆಗ್ರಹಿಸಿ ಟೋಲ್ ಗೇಟ್ ಬಳಿ ಪ್ರತಿಭಟನೆ
Team Udayaprabha13/10/2026
posted on


,


















