ಬೆಳಗಾವಿ:
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ಖನಗಾಂವ ಕೆ.ಎಚ್. ಹಾಗೂ ಹಿಂಡಲಗಾ ಗ್ರಾಮಗಳಲ್ಲಿ ಒಟ್ಟು ಸುಮಾರು ₹2.70 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಖನಗಾಂವ ಕೆ.ಎಚ್. ಗ್ರಾಮದಲ್ಲಿ ಸುಮಾರು ₹85 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ನಿರ್ಮಾಣದಿಂದ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗುವುದರ ಜತೆಗೆ ಗ್ರಾಮದ ರಸ್ತೆ ಸಂಪರ್ಕ ಮತ್ತು ಮೂಲಸೌಕರ್ಯ ಮತ್ತಷ್ಟು ಸುಧಾರಿಸಲಿದೆ.
ನಂತರ ಹಿಂಡಲಗಾ ಗ್ರಾಮದ ಸಮರ್ಥ ಕಾಲೋನಿ ಸೇರಿದಂತೆ ವಿವಿಧ ಭಾಗಗಳಲ್ಲಿ ಸುಮಾರು ₹1.85 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮೀಣ ಅಭಿವೃದ್ಧಿಗೆ ರಸ್ತೆ ಸಂಪರ್ಕವೇ ಆಧಾರ
ಗ್ರಾಮೀಣ ಭಾಗದ ಜನರಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು, ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವುದು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗ್ರಾಮದ ಪ್ರತಿಯೊಂದು ಬೀದಿಗೂ ಗುಣಮಟ್ಟದ ರಸ್ತೆ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರಿದಿವೆ. ಗ್ರಾಮಸ್ಥರ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿ ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮಗಳ ಅಭಿವೃದ್ಧಿಗೂ ಮತ್ತಷ್ಟು ವೇಗ ದೊರೆಯಲಿದೆ ಎಂದು ಆಶಿಸಿದರು.
ಗ್ರಾಮೀಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸುವ ಮೂಲಕ ಜನರ ದೈನಂದಿನ ಬದುಕಿಗೆ ಅನುಕೂಲ ಕಲ್ಪಿಸುವುದು ತಮ್ಮ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮೋಟಾರ್ ಪಂಪ್ಸೆಟ್ ವಿತರಿಸಿದ ಲಕ್ಷ್ಮೀ ಹೆಬ್ಬಾಳಕರ್
ರೈತರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ; ಸರ್ಕಾರಿ ಯೋಜನೆಗಳ ಸದುಪಯೋಗಕ್ಕೆ ಕರೆ
ಬೆಳಗಾವಿ:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೋಟಾರ್ ಪಂಪ್ಸೆಟ್ಗಳನ್ನು ಅಧಿಕೃತವಾಗಿ ವಿತರಿಸಿದರು.
ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಾವರಿ ಸೌಲಭ್ಯ ಕಲ್ಪಿಸುವುದು ಹಾಗೂ ಪರಿಶಿಷ್ಟ ಪಂಗಡಗಳ ಸಮುದಾಯದ ಅರ್ಹ ಫಲಾನುಭವಿಗಳು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಮೋಟಾರ್ ಪಂಪ್ಸೆಟ್ಗಳನ್ನು ವಿತರಿಸುವ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ರೈತರ ಕೃಷಿ ಚಟುವಟಿಕೆಗಳಿಗೆ ಸೂಕ್ತ ನೀರಾವರಿ ಸೌಲಭ್ಯ ದೊರೆಯುವುದು ಅತ್ಯಂತ ಮಹತ್ವದ್ದಾಗಿದೆ. ರೈತರು ತಮ್ಮ ಕೃಷಿ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಹಾಗೂ ಉತ್ತಮ ಆದಾಯ ಗಳಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ಸರ್ಕಾರದ ಜನಪರ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಅರ್ಹ ಫಲಾನುಭವಿಗಳು ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಬೇಕು. ವಿಶೇಷವಾಗಿ ಪರಿಶಿಷ್ಟ ಪಂಗಡಗಳ ಸಮುದಾಯದ ಬಾಂಧವರು ಆರ್ಥಿಕವಾಗಿ ಮತ್ತಷ್ಟು ಸಬಲರಾಗಿ, ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.
ಸರ್ಕಾರಿ ಯೋಜನೆಗಳ ಮೂಲಕ ಅರ್ಹರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಅವರ ಅಭಿವೃದ್ಧಿಗೆ ನೆರವಾಗುವುದು ಸರ್ಕಾರದ ಬದ್ಧತೆಯಾಗಿದೆ. ಫಲಾನುಭವಿಗಳು ದೊರೆತ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ ಸಾಧಿಸಬೇಕು ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬೆಳಗಾವಿ ಜಿಲ್ಲಾ ವ್ಯವಸ್ಥಾಪಕ ಸದಾಶಿವ ಭೀಮಗೋಳ, ತಾಲೂಕು ಅಭಿವೃದ್ಧಿ ಅಧಿಕಾರಿ ಬಿ.ಎಂ. ಮಂಜಪ್ಪ, ಕಚೇರಿ ಸಿಬ್ಬಂದಿ ಗಂಗಾಧರ ಜಿರಳೆ ಹಾಗೂ ಅರವಿಂದ ದ್ಯಾಮನಗೌಡರ್ ಉಪಸ್ಥಿತರಿದ್ದರು.


,

















