ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಖಂಡಿಸಿ ಸೋಮವಾರ ದೇಶದಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.
ಬಿಹಾರದ ಮೊದಲ ಮುಖ್ಯಮಂತ್ರಿ ಶ್ರೀಕೃಷ್ಣ ಸಿಂಗ್ ಅವರ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ‘ಪ್ರಧಾನಿ ಎಲ್ಲಿಗೂ ಹೋಗುವುದಿಲ್ಲ’ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ‘ಮೋದಿ ಕಾ ಬಾಪ್ ಭೀ ಜಾಯೇಗಾ’ (ಮೋದಿ ಅಪ್ಪನೂ ಹೋಗಬೇಕು) ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ ಅವರ ದಿವಂಗತ ತಂದೆಯ ಬಗ್ಗೆ ಖರ್ಗೆ ನೀಡಿದ ಅವಮಾನಕರ, ಅಸಭ್ಯ ಮತ್ತು ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ದೇಶದ ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ತಿಳಿಸಿದೆ.
ಇದೇ ವೇಳೆ, ಖರ್ಗೆ ಅವರ ಹೇಳಿಕೆ ವಿರುದ್ಧ ಬಿಹಾರದ ಬಿಜೆಪಿ ಕಾರ್ಯಕರ್ತರೊಬ್ಬರು ಭಾನುವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಪಟ್ನಾದ ಕೊತ್ವಾಲಿ
ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ದೂರು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಗಾಂಧಿ ಮೈದಾನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ದೂರನ್ನು ಅಲ್ಲಿಗೆ ವರ್ಗಾಯಿಸಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.
ದೂರು ದಾಖಲಿಸಿರುವ ಬಿಜೆಪಿ ಕಾರ್ಯಕರ್ತ ಕೃಷ್ಣ ಕುಮಾರ್ ಸಿಂಗ್, ಖರ್ಗೆ ಅವರು 24 ಗಂಟೆಗಳೊಳಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.


,


















