ಮಂಗಳೂರು :
ಲೋಕಸಭಾ ಚುನಾವಣೆಗೆ ಮಂಗಳೂರು ಕ್ಷೇತ್ರದಿಂದ ಪ್ರಬಲ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಅಧಿಕೃತ ಘೋಷಣೆ ಮಾಡಿದ್ದಾರೆ. ಕರಾವಳಿಯ ಕಮಲ ಭದ್ರಕೋಟೆಯಲ್ಲಿ ಈ ಸಲ ಅವರು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಮತ್ತೊಮ್ಮೆ ಸ್ಪರ್ಧಿಸುವುದು ನಿಶ್ಚಿತ ಎನಿಸಿದೆ. ನಳಿನ್ ಕುಮಾರ್ ಕಟೀಲು ವಿರುದ್ಧ ಆಡಳಿತ ವಿರೋಧಿ ಅಲೆ ಎದ್ದಿದೆ. ಸ್ವ ಪಕ್ಷದ ಕಾರ್ಯಕರ್ತರೇ ಅವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಈ ಬಾರಿ ಅವರಿಗೆ ಟಿಕೆಟ್ ನೀಡುತ್ತದೆ ಎಂಬ ಬಗ್ಗೆ ಚರ್ಚೆ ನಡೆದಿರುವಾಗಲೇ ಇದೀಗ ಪುತ್ತಿಲ ಅವರ ಸ್ಪರ್ಧೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಮುಂದಿನ ದಿನಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದರು. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಸ್ಪರ್ಧಿಸಿ ಪುತ್ತೂರಿನಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣರಾಗಿದ್ದರು. ಚುನಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಪುತ್ತಿಲ ನಡುವೆ ನಡೆದ ಹಣಾಹಣಿಯಲ್ಲಿ ಕಾಂಗ್ರೆಸ್ ಕಷ್ಟಪಟ್ಟು ಗೆಲುವು ಸಾಧಿಸಿತ್ತು. ಪುತ್ತಿಲ ಪರಿವಾರದ ಪ್ರಾಬಲ್ಯ ಗಮನಿಸಿ ಕೆಲ ನಾಯಕರು ಅವರನ್ನು ಮತ್ತೆ ಪಕ್ಷಕ್ಕೆ ಸೆಳೆಯಲು ಮುಂದಾಗಿದ್ದರು. ಆದರೆ ಯಾವುದೇ ಷರತ್ತು ಇಲ್ಲದೆ ಪಕ್ಷ ಸೇರುವಂತೆ ಬಿಜೆಪಿ ಗಡುವು ನೀಡಿತ್ತು. ಇದರ ಬೆನ್ನಲ್ಲೇ ಪುತ್ತಿಲ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆದಿದ್ದು ಪುತ್ತಿಲ ಅವರ ಸ್ಪರ್ಧೆ ಇದೀಗ ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾಗಿ ಪರಿಣಮಿಸುವುದು ಬಹುತೇಕ ಖಚಿತವಾಗಿದೆ.