ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ ನಲ್ಲಿ ಸಚಿವ ಸಂಪುಟವನ್ನು ಸಣ್ಣಮಟ್ಟಿಗೆ ಪುನರ್ ರಚನೆ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಕರಾವಳಿ ಭಾಗದ ಕೆಲ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ನಿಚ್ಚಳವಾಗಿದೆ. ಸತ್ಯಶೋಧನಾ ಸಮಿತಿ ನಡೆಸಿದ ಮುಖಾಮುಖಿ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಕೆಲವು ನಿಷ್ಕ್ರಿಯತೆ ಹೊಂದಿರುವ ಸಚಿವರನ್ನು ಕೈಬಿಡುವ ಹಾಗೂ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಹಿರಂಗವಾಗಿ ಶಾಸಕರಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಮಾಡಲು ಹಸಿರು ನಿಶಾನೆ ತೋರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಯಾಗಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿರುವ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದರಲ್ಲಿ ಯಾವ ಸಂದೇಹವು ಇಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ ಲಕ್ಷ್ಮಣ ಸವದಿ ಅವರ ಹೆಸರು ಮುಂಚೂಣಿಯಲ್ಲಿ ಸೇರ್ಪಡೆಯಾಗಲಿದೆ.

ಕರಾವಳಿಗೆ ಆದ್ಯತೆ :
ಇವೆಲ್ಲದರ ನಡುವೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ ರೈ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಹೆಸರು ಸಚಿವ ಸಂಪುಟ ಸೇರ್ಪಡೆಗೊಳ್ಳುವವರ ಹೆಸರಿನಲ್ಲಿದೆ. ಸಿದ್ದರಾಮಯ್ಯ ಅವರು ಈ ಬಾರಿ ಕರಾವಳಿ ಜಿಲ್ಲೆಗಳಿಗೆ ಆದ್ಯತೆ ನೀಡುವಲ್ಲಿ ಉತ್ಸುಕತೆ ತೋರಿದ್ದಾರೆ.