ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ಅಕ್ರಮ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ನಿಪ್ಪಾಣಿ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದು ಮಾಡುವಂತೆ ಕೋರಿ ಶಶಿಕಲಾ ಜೊಲ್ಲೆ ಸಲ್ಲಿಸಿದ್ದ ಅರ್ಜಿಯನ್ನು ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಶುಕ್ರವಾರ ವಿಚಾರಣೆ ನಡೆಸಿದರು. ಶಶಿಕಲಾ ಪರ ವಾದ ಮಂಡಿಸಿದ ವಕೀಲ ಶಿವರಾಜ ಎಸ್. ಬಳ್ಳೊಳ್ಳಿ ಅವರು, ಇದೊಂದು ರಾಜಕೀಯ ದುರುದ್ದೇಶದಿಂದ ಕೂಡಿದ ಪ್ರಕರಣ. ಅರ್ಜಿದಾರರ ಏಜೆಂಟ್ ಜೇಬಿನಲ್ಲಿ ರೂ.10,000 ₹ ನಗದು ಇತ್ತು ಎಂಬ ಏಕೈಕ ಕಾರಣಕ್ಕೆ ಈ ಪ್ರಕರಣ ದಾಖಲಿಸಿದೆ. ಈ ಹಣ ಲಂಚದ ಹಣ ಎಂಬುದನ್ನು ಸಾಬೀತುಪಡಿಸಲು ಯಾವುದೇ ಸಾಕ್ಷ್ಯ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣ ರದ್ದುಪಡಿಸಿ ಆದೇಶಿಸಿತು.