ಮಂಗಳೂರು: ಬೆಂಗಳೂರಿನಿಂದ ಶುಕ್ರವಾರ ರಾತ್ರಿ ಹೊರಟಿದ್ದ ಖಾಸಗಿ ಸ್ಲಿಪರ್ ಕೋಚ್ ಬಸ್‌, ಶನಿವಾರ ಮುಂಜಾನೆ ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿತ್ತು. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಂತೆ, ಮುಂಜಾನೆಯ ಸಮಯ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಭೀಕರ ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ಸಾಗಿಸಲು ನೆರವಾದರು. ಮೃತಪಟ್ಟ ಪ್ರಯಾಣಿಕರ ಗುರುತು ಇನ್ನೂ ಪತ್ತೆಯಾಗಿಲ್ಲ.

ಪೊಲೀಸ್ ಭೇಟಿ, ತನಿಖೆ:

ವಿಷಯ ತಿಳಿದ ತಕ್ಷಣ ಉಪ್ಪಿನಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.