ಬೆಳಗಾವಿ : ಮದುವೆ ಆಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 27 ವರ್ಷದ ಯುವಕನಿಗೆ ಬೆಳಗಾವಿಯ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಗುರುವಾರದಂದು ತೀರ್ಪು ಹೊರಡಿಸಿದೆ.
ರಾಯಬಾಗ ತಾಲೂಕು ಮೊರಬ ಗ್ರಾಮದ ಅಜಿತ ಸಹದೇವ ಪಾಟೀಲ ಶಿಕ್ಷೆಗೊಳಗಾದವ. ಮದುವೆಯಾಗುವುದಾಗಿ ನಂಬಿಸಿದ್ದ ಈತ 2020 ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಆಕೆಯ ಪೋಷಕರು ಕುಡಚಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ತನಿಖಾಧಿಕಾರಿ ಕೆ.ಎಚ್. ಹಟ್ಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿರುವ ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು, ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.
ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಸಂತ್ರಸ್ತೆಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ.ಪಾಟೀಲ ವಾದ ಮಂಡಿಸಿದ್ದರು.