ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಈ ಬಾರಿ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಸತತವಾಗಿ ವಿಧಾನ ಪರಿಷತ್ತಿಗೆ ಕಳೆದ ಮೂರು ದಶಕಗಳಿಂದ ಆಯ್ಕೆಯಾಗುತ್ತಾ ಬಂದಿರುವ ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ಕರಾವಳಿಯಲ್ಲಿ ಪ್ರಭಾವಿ ಆಗಿರುವ ಬಿಲ್ಲವ ಸಮುದಾಯಕ್ಕೆ ಮಾನ್ಯತೆ ನೀಡಿರುವ ಬಿಜೆಪಿ ವರಿಷ್ಠರು ಕೊನೆಗೂ ಶ್ರೀನಿವಾಸ್ ಪೂಜಾರಿ ಅವರಿಗೆ ಟಿಕೆಟ್ ನೀಡುವ ಮೂಲಕ ಆ ಸಮುದಾಯದ ಮನ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ. ಕಾಂಗ್ರೆಸ್ ಇಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಇಲ್ಲಿ ಭಾರಿ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.