ಬೆಳಗಾವಿ: ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹದ ಹಿನ್ನೆಲೆಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಶೀಲ್ದಾರರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಬೇಕು; ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಉಂಟಾಗಬಹುದಾದ ಅತಿವೃಷ್ಟಿ/ಪ್ರವಾಹ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೋಟ್ ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು. ಅಗತ್ಯಬಿದ್ದರೆ ಬಾಡಿಗೆ ಬೋಟ್ ಗಳನ್ನು ಪಡೆಯಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಐದು ಬೋಟ್ ಗಳನ್ನು ಖರೀದಿಸಿ ಅವುಗಳ ಬಳಕೆಯ ಕುರಿತು ಅಗ್ನಿಶಾಮಕ ದಳದ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ತುರ್ತು ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸರ್ಚ್ ಲೈಟ್ ಗಳನ್ನು ಕೂಡ ಒದಗಿಸಲಾಗುವುದು ಎಂದು ಹೇಳಿದರು.ನದಿತೀರದ ಗ್ರಾಮಗಳ ಕುರಿತು ತಹಶೀಲ್ದಾರರಿಂದ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿಗಳು, ಪ್ರವಾಹ ಬಾಧಿತಗೊಳ್ಳಲಿರುವ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿತೀರದ ಗ್ರಾಮಗಳಲ್ಲಿ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಅಗ್ನಿಶಾಮಕ ಮತ್ತು ಪೊಲೀಸ್ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು.
ಮಂಗಾವತಿ, ಜುಗೂಳ, ಶಿರಗುಪ್ಪಿ, ಕುಸನಾಳ, ಬಳಜಿವಾಡ, ಮುಳವಾಡ, ಉಗಾರ್, ಯಡೂರ, ಮಾಂಜರಿ, ತಂಗಡಗಿ, ಶಿನಾಳ, ಝಂಜರವಾಡ, ಸತ್ತಿ, ಸವದಿ, ನಾಗನೂರ ಪಿ.ಕೆ., ಬಳವಾಡ, ಭಿಂವಶಿ, ಕೋಡಣಿ, ಭೋಜ್, ಹುನ್ನರಗಿ ಹಾಗೂ ತೋಟದ ವಸತಿ ಸೇರಿದಂತೆ ಕಳೆದ ಬಾರಿ ಪ್ರವಾಹದಿಂದ ಬಾಧಿತಗೊಂಡಿದ್ದ ಗ್ರಾಮಗಳ ಪರಿಸ್ಥಿತಿ ಮೇಲೆ ನಿರಂತರ ನಿಗಾ ವಹಿಸಬೇಕು ಎಂದರು.
ಘಟಪ್ರಭಾ ನದಿ ಪ್ರವಾಹದಿಂದ ಬಾಧಿತಗೊಳ್ಳಲಿರುವ ಬಸನಾಳ, ಕೋಟನಾಳ, ಸಂಕೇಶ್ವರದ ನದಿಗಲ್ಲಿ, ಕುಂಬಾರ ಓಣಿ ಮತ್ತಿತರ ಪ್ರದೇಶಗಳಲ್ಲಿಯೂ ನಿಗಾ ವಹಿಸಬೇಕು ಎಂದರು.
ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು.