
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾಗುವ ಮದ್ಯ ವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಧರ್ಮಸ್ಥಳದ ಕಾರ್ಯಕ್ರಮ ಅಮೃತವರ್ಷಿಣಿ ಸಭಾಭವನದಲ್ಲಿ ಮೇ 20 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ಬಾಳೆಹೊಸೂರು ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಪೀಠದ ಶ್ರೀಮಹಾರಾಜ ನಿರಂಜನ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮಿ ಆಶೀರ್ವಚನ ನೀಡುವರು. ಹೇಮಾವತಿ ವೀ.ಹೆಗ್ಗಡೆ ವಾರ್ಷಿಕ ವರದಿ ಬಿಡುಗಡೆ ಮಾಡುವರು.
ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ದಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ ನುಡಿಗಳನ್ನಾಡುವರು.
ರಾಜ್ಯಾದ್ಯಂತ ನಡೆದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನ ಮುಕ್ತರಾಗಿರುವ 2,900 ನವಜೀವನ ಸದಸ್ಯರು ಮತ್ತು ಅವರ ಕುಟುಂಬಸ್ಥರು ಭಾಗವಹಿಸಲಿದ್ದಾರೆ ಎಂದು ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಸ್ ತಿಳಿಸಿದ್ದಾರೆ.