ಬೆಳಗಾವಿ ಸುವರ್ಣ ಸೌಧ : ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ, ಮಂಗಳವಾರ ವಿಧಾನ ಸಭೆಯು 3 ಪ್ರಮುಖ ವಿಧೇಯಕಗಳಿಗೆ ಅಂಗೀಕಾರ ನೀಡಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ 2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಕಡ್ಡಾಯ ಸೇವಾ (ತಿದ್ದುಪಡಿ ) ವಿಧೇಯಕವನ್ನು ಸದನದಲ್ಲಿ ಮಂಡಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು 2023ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕವನ್ನು ಸದನದಲ್ಲಿ ಮಂಡಿಸಿದರು.
2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಬದಲಿಗೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಸದನ ಮುಂದೆ ಮಂಡಿಸಿದರು.
ಈ ವಿಧೇಯಕಗಳಿಗೆ ವಿಧಾನ ಸಭೆ ಅನುಮೋದನೆ ನೀಡಿತು. ಅನಮೋದನೆ ಗೊಂಡ ವಿಧೇಯಕಗಳನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಲು ಕಳುಹಿಸಲಾಯಿತು.
ಇದಕ್ಕೂ ಮುನ್ನ ಸಚಿವ ಹೆಚ್.ಕೆ.ಪಾಟೀಲ್ 1965ರ ಕರ್ನಾಟಕ ಸಾರ್ವಜನಿಕ ಗ್ರಂಥಾಲಯಗಳ ಅಧಿನಿಯಂ ಕಲಂ 3(2)(ಬಿ) ಮೇರೆಗೆ ವರ್ಗಾಯಿಸಬಹುದಾದ ಒಂಟಿ ಮತದ ಮೂಲಕ ದಾಮಾಷಾ ಪ್ರಾತಿನಿಧ್ಯದ ತತ್ವದ ಆಧಾರದ ಮೇಲೆ ವಿಧಾನ ಸಭೆಯಿಂದ ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ನಾಲ್ಕು ಸದಸ್ಯರನ್ನು ಚುನಾಯಿಸಲು ಸೂಚಿಸಿದರು.