ಬೆಂಗಳೂರು : 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ನಾಳೆ (ಮಾರ್ಚ್ 25) ಆರಂಭವಾಗಲಿದ್ದು, ಏಪ್ರಿಲ್ 6ರವರೆಗೆ ನಡೆಯಲಿದೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. 41,375 ಪುನರಾವರ್ತಿತ ಸಹ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರಾಗಿದ್ದಾರೆ. ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಬರೆಯುತ್ತಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ ಒದಗಿಸಲು ತಯಾರಿ ಮಾಡಿಕೊಳ್ಳಲಾಗಿದೆ.
ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.