Join The Telegram | Join The WhatsApp |
ಬೆಂಗಳೂರು-
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿರುವಂತೆ ಚುನಾವಣಾ ಪ್ರಕ್ರಿಯೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗವು ಅಧಿಕಾರಿಗಳ ವರ್ಗಾವಣೆ ನೀತಿಯನ್ನು ಹೊರಡಿಸಿದೆ. ಸ್ವಂತ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಮೂರು ವರ್ಷಗಳಿಂದ ಒಂದೇ ಕಡೆ ಠಿಕಾಣಿ ಹೂಡಿರುವ ಅಧಿಕಾರಿಗಳನ್ನು ವರ್ಗಾಯಿಸುವಂತೆ ಸೂಚಿಸಿದೆ.
ಕರ್ನಾಟಕ ವಿಧಾನಸಭೆಯ ಅವಧಿ 2023ರ ಮೇ 24ರಂದು ಮುಕ್ತಾಯಗೊಳ್ಳಲಿದ್ದು, ಅದರೊಳಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣ ಆಯೋಗ ನೀತಿಯನ್ನು ಹೊರಡಿಸಿದ್ದು, ಈ ಸಂಬಂಧ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆಯಲಾಗಿದೆ.
ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಸಂಬಂಧಿಸಿದ ನೀತಿಯನ್ನು ಅನುಷ್ಠಾನಗೊಳಿಸಿರುವ ಬಗ್ಗೆ 2023ರ ಜ. 31ರೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿರುವ ಆಯೋಗ, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತಾಕೀತು ಮಾಡಿದೆ. ಒಂದು ವೇಳೆ ಯಾವುದೇ ಅಧಿಕಾರಿಗಳು ತವರು ಜಿಲ್ಲೆಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವುದು ಆಯೋಗದ ಗಮನಕ್ಕೆ ಬಂದರೆ ಅಂಥವರ ಮೇಲೆ ತತ್‌ಕ್ಷಣವೇ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ.
Join The Telegram | Join The WhatsApp |