ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ದೇಶಾದ್ಯಂತ ವಾಡಿಕೆಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 1, 2 ಹಾಗೂ 3ರಂದು ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ.

ಸೆ.1ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ, ಗದಗ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಕೊಡಲಾಗಿದೆ.

ಸೆ.2ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳು ಹಾಗೂ ಬೀದರ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಕೊಡಗು, ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಸೆ.3 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್‌, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.