ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ಕೆಲ ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಶಾಲೆಗಳಿಗೆ ಕಳೆದ ವಾರ  ಕೆಲದಿನ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಮತ್ತೆ ಮಳೆ ಆಗುತ್ತಿರುವುದರಿಂದ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿದೆ, ಈ ಹಿನ್ನೆಲೆಯಲ್ಲಿ ಸೋಮವಾರ (ಜೂ.16) ರೆಡ್‌ ಅಲರ್ಟ್‌ ಘೋಷಿಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜೂನ್ 16ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ,ಪ್ರೌಢ ಶಾಲೆಗಳಿಗೆ ಸೋಮವಾರ (ಜೂ.16) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಆಡಳಿತ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ 6 ತಾಲೂಕುಗಳಲ್ಲಿ ನಾಳೆ (ಜೂ 16, ಸೋಮವಾರ) ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ಜಿಲ್ಲಾಡಳಿತ ರಜೆ‌ ಘೋಷಣೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕೂಗಳಾದ ಚಿಕ್ಕಮಗಳೂರು, ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, ಎನ್ ಆರ್ ಪುರ ತಾಲೂಕು ಗಳಲ್ಲಿ ರಜೆ ಅನ್ವಯವಾಗಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಘೋಷಣೆ ಮಾಡಿದ್ದಾರೆ.

ಮಲೆನಾಡು ,ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.