Join The Telegram | Join The WhatsApp |
ಬೆಳಗಾವಿ/ಹುಬ್ಬಳ್ಳಿ :
ಬಿಜೆಪಿ ರೋಡ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 28 ರಂದು ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಇದು ಅವರ ಎರಡನೇ ಭೇಟಿಯಾಗಿದೆ.
ಜನವರಿ 27ರಂದು ಅಮಿತ ಶಾ ಹುಬ್ಬಳ್ಳಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜನವರಿ 28 ರಂದು ಬೆಳಿಗ್ಗೆ ಅವರು ಹುಬ್ಬಳ್ಳಿ-ಧಾರವಾಡದ ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೆಎಲ್‌ಇಯ ಬಿವಿಬಿ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮ ಮತ್ತು ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ, ನಂತರ ಧಾರವಾಡದಲ್ಲಿ ವಿಧಿವಿಜ್ಞಾನ ವಿವಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜನವರಿ 27 ರಂದು ರಾತ್ರಿ 10 ಕ್ಕೆ ಹುಬ್ಬಳ್ಳಿಗೆ ಆಗಮಿಸುವ ಅಮಿತ್ ಶಾ, ಮರುದಿನ ಬೆಳಗ್ಗೆ 10:30ಕ್ಕೆ ಇಲ್ಲಿನ ಬಿವಿಬಿ ತಾಂತ್ರಿಕ ಮಹಾವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ಬಳಿಕ ಧಾರವಾಡಕ್ಕೆ ತೆರಳಿ 11:45ಕ್ಕೆ ವಿಧಿ-ವಿಜ್ಞಾನ ವಿವಿ ಕ್ಯಾಂಪಸ್‌ಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಕುಂದಗೋಳಕ್ಕೆ ಮಧ್ಯಾಹ್ನ 1:30ಕ್ಕೆ ಆಗಮಿಸಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಕುಂದಗೋಳದಲ್ಲಿ ಬಿಜೆಪಿ ರ್ಯಾಲಿ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಎಂ.ಕೆ.ಹುಬ್ಬಳ್ಳಿಯಲ್ಲಿ ಸಮಾವೇಶ :
ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಎರಡು ಸಭೆಗಳನ್ನು ಆಯೋಜಿಸಲಾಗಿದೆ. ಒಂದು ಸಂಘಟನೆಗೆ ಸಂಬಂಧಿಸಿದೆ ಮತ್ತು ಇನ್ನೊಂದು ನಾಯಕರ ಸಭೆ ಎಂದು ಹೇಳಲಾಗಿದೆ.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಬೆಳಗಾವಿಯ ಎಂ.ಕೆ.ಹುಬ್ಬಳ್ಳಿಯಲ್ಲಿ ಶನಿವಾರ ಸಂಜೆ 4 ಗಂಟೆಗೆ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಕಿತ್ತೂರು, ಬೈಲಹೊಂಗಲ, ಖಾನಾಪುರ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಮಾವೇಶ ಇದಾದ್ದು, 75 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ ಇದೆ.
Join The Telegram | Join The WhatsApp |