ದೆಹಲಿ: ಭಾರತದ ಬಾಕ್ಸರ್ ವಿಜೇಂದರ್ ಸಿಂಗ್ ಅವರು ಇಂದು (ಬುಧವಾರ) ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದಾರೆ.

‘ದೇಶದ ಅಭಿವೃದ್ಧಿ ಮತ್ತು ಜನರ ಸೇವೆಗಾಗಿ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ’ ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.

38 ವರ್ಷದ ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್‌ಶಿಪ್‌ ಮತ್ತು 2010ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದರು. 2010ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದ ಅವರು 2014ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ವಿಜೇಂದರ್ ಸಿಂಗ್ ಅವರು ದಕ್ಷಿಣ ದೆಹಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಜಾಟ್ ಸಮುದಾಯಕ್ಕೆ ಸೇರಿದ ವಿಜೇಂದರ್ ಅವರು ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.