ಮೈಸೂರು : ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.

*ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ*

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಸುಧಾಕರ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು .

ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

*ತಪ್ಪು ಮಾಡಿದವರ ಮೇಲೆ ಕ್ರಮ*

ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿ ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು.

ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದರು.

2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

*ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ*

ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.

*ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ*

ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.

*ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ವಿಳಂಬ: ಪರಿಶೀಲನೆ*
ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿನಿಂದ ಸಂಬಳ ದೊರೆತಿಲ್ಲದಿರುವ ಬಗ್ಗೆ ಮಾತನಾಡಿ ಸಂಬಳ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌.

ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

 

*ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ*

*ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ*

*ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: *ಮುಖ್ಯಮಂತ್ರಿ ಸಿದ್ದರಾಮಯ್ಯ*

ಮೈಸೂರು, ಸೆಪ್ಟೆಂಬರ್ 03: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

 

ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನÀ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.

*ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ*

ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

*ಪ್ರತಿ ವರ್ಷ ದೇವಾಲಯಯದ ಆದಾಯ ಹೆಚ್ಚಳ*

ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.

*ವಸ್ತ್ರ ಸಂಹಿತೆ ಇಲ್ಲ*

ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.

*ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ*

ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.

*ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ*

ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.

*ಐದು ದೇವಾಲಯ ಸಮೂಹದ ಜೀರ್ಣೋದ್ಧಾರ*

ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.

*ಚಾಮುಂಡೇಶ್ವರಿ ಕ್ಷೇತ್ರವನ್ನು ಆಕರ್ಷಕವಾಗಿಸಿ ಹೆಚ್ಚು ಸವಲತ್ತು ನೀಡಲು ತೀರ್ಮಾನ*

ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.

 

*ದೇವಸ್ಥಾನದ ಆಸ್ತಿಗಳ ಸರ್ವೆ*

ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

 

ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.

*ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ*

*ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ*

*ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ: ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ*

ಬೆಂಗಳೂರು ಸೆ 3: ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ

ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು.

ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.

ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.

ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ‌ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.

ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.

ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ನೀಡಿದರು.

ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಪದಕ ಪುರಸ್ಕತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದರು.

ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿದ್ದರು.