ದೆಹಲಿ: ಕರ್ನಾಟಕದ ತೆರವಾಗಿರುವ 3 ವಿಧಾನಸಭೆಯ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಇದೀಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದೆ. ಚನ್ನಪಟ್ಟಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹಗ್ಗಜಗ್ಗಾಟ ಜೋರಾಗಿರುವ ಕಾರಣ ಈ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮಗೊಂಡಿಲ್ಲ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಕ್ಷೇತ್ರವಾಗಿದ್ದ ಶಿಗ್ಗಾವಿ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಸಂಡೂರು ಕ್ಷೇತ್ರಕ್ಕೆ ಬಿಜೆಪಿ ನಾಯಕ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ. ಹನುಮಂತು ಅವರು ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ.
ಚನ್ನಪಟ್ಟಣ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಜಾರಿದೆ ಎಂದು ಮೂಲಗಳು ಹೇಳುತ್ತಿದೆ. ಟಿಕೆಟ್ಗಾಗಿ ಭಾರಿ ಹೋರಾಟ ನಡೆಸಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ಗೆ ತೀವ್ರ ನಿರಾಸೆಯಾಗುವ ಲಕ್ಷಣ ಇದೆ. ಹೆಚ್.ಡಿ. ಕುಮಾರಸ್ವಾಮಿ ಸಂಸದರಾದ ಬಳಿಕ ರಾಜೀನಾಮೆ ನೀಡಿದ ಚನ್ನಪಟ್ಟಣ ಸ್ಥಾನಕ್ಕೆ ಇದೀಗ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸಾಧ್ಯತೆ ಬಹುತೇಕ ಪಕ್ಕಾ ಆಗಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಿಪಿ ಯೋಗೇಶ್ವರ್ ಅವರನ್ನು ಮನವೊಲಿಸುತ್ತಾರಾ ನೋಡಬೇಕಾಗಿದೆ. ಇಲ್ಲಿ ಏನ್ಡಿಎ ಅಭ್ಯರ್ಥಿ ಘೋಷಣೆ ನಂತರ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಬಲವಾಗಿದೆ.
ಒಟ್ಟಾರೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾಗಿರುವ ಬಿಜೆಪಿ ಮತ್ತು ಜೆಡಿಎಸ್ ಪಾಲಿಗೆ ಅಗ್ನಿಪರೀಕ್ಷೆಯಾಗಲಿರುವುದು ಖಚಿತ. ಕಾಂಗ್ರೆಸ್ಸನ್ನು ಮಣಿಸಲು ಬಿಜೆಪಿ, ಜೆಡಿಎಸ್ ಸಿದ್ಧತೆ ನಡೆಸಿದ್ದು ತೀವ್ರ ಪೈಪೋಟಿ ನಡೆಯುವ ಎಲ್ಲಾ ಸಾಧ್ಯತೆಗಳು ಇವೆ.